ಕಲಬುರಗಿ, ಏ. 14: ಸಂವಿಧಾನಿಕ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ, ಭ್ರಾತೃತ್ವ ಮನೋಭಾವನೆಗಳನ್ನು ದಿನನಿತ್ಯದ ಜೀವನದಲ್ಲಿ ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸಂವಿಧಾನವೇ ನಮ್ಮೆಲ್ಲರ ಧರ್ಮವಾಗಬೇಕು ಮತ್ತು ಅದರ ಚೌಕಟ್ಟಿನಲ್ಲಿಯೇ ನಾವು ಸಾಗಬೇಕು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಹೇಳಿದ್ದಾರೆ.
ಅವರು ಬುಧುವಾರ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ರವರ 130ನೇ ಜಯಂತಿಯ ಪ್ರಯುಕ್ತ ಬುಧವಾರ ನಗರದ ಜಗತ್ ವೃತ್ತದ ಬಳಿ ಇರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಡಳಿತದ ಪರವಾಗಿ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಶಿರಸಗಿ, ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್. ಸತೀಶ ಕುಮಾರ, ಡಿಸಿಪಿ ಕಿಶೋರ್ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಶ್ ಸಾಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಅಲ್ಲಾಭಕ್ಷ ಅವರು ಸಹ ಮಹಾನಾಯಕನಿಗೆ ಗೌರವ ಸಲ್ಲಿಸಿದರು.
ಇದಕ್ಕೂ ಪೂರ್ವ ಸಿದ್ದಾರ್ಥ ಬುದ್ಧ ವಿಹಾರ ಟ್ರಸ್ಟಿನ ಪೂಜ್ಯ ಸಂಘಾನAದ ಭಂತೇಜಿ ಅವರ ನೇತೃತ್ವದಲ್ಲಿ ಅಂಬೇಡ್ಕರ ಅವರಿಗೆ ಬುದ್ಧ ವಂದನೆ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಪಂಚಶೀಲ ಧ್ವಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಚಾರ್ಜ್ ಅವರು ನೀಲ ಧ್ವಜಾರೋಹಣ ಮಾಡಿದರು.
ಜಯಂತೋತ್ಸವ ಸಮಿತಿಯ ಅಧ್ಯಕ್ಷ ಪ್ರಕಾಶ್ ಔರಾದ್ಕರ್, ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಸುರೇಶ ಹಾದಿಮನಿ, ಮುಖಂಡರಾದ ಗುಂಡಪ್ಪ ಲಂಡನಕರ್, ದಶರಥ ವಂಟಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಎಸ್.ಸಿ-ಎಸ್.ಟಿ. ನೌಕರರ ಸಂಘಟನೆಯ ಪದಾಧಿಕಾರಿಗಳು ಮತ್ತು ಸಂಘ ಸಂಸ್ಥೆಯ ಮುಖಂಡರುಗಳು ಉಪಸ್ಥಿತರಿದ್ದರು.