ಜುಲೈ 5ರಿಂದ ಮಾಲ್, ಧಾರ್ಮಿಕ ಕ್ಷೇತ್ರಗಳ ಆರಂಭ, ಸಿನೇಮಾಗಿಲ್ಲ ಅವಕಾಶ ಮುಂದಿನ ವಾರದಿಂದ ವಾರಾಂತ್ಯದ ಕರ್ಫ್ಯೂ ಇಲ್ಲ

0
849

ಕಲಬುರಗಿ, ಜುಲೈ 03: ಕೋವಿಡ್-19 ನಿಯಂತ್ರಣ ತಾಂತ್ರಿಕ ಸಲಹೆಗಳನ್ನು ಗಮನಿಸಿ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಬರುವ ಜುಲೈ 5ರಿಂದ ಮಾಲ್‌ಗಳು, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ, ಮೇಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಗಳಲ್ಲಿ ನೂರಕ್ಕೆ ನೂರರಷ್ಟು ಸಂಚಾರಕ್ಕೆ ಅವಕಾಶ ಕಲ್ಪಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.
ಈಗಿನ ವಾರಾಂತ್ಯದ ಕರ್ಫ್ಯೂ ಮುಂದಿನ ವಾರದಿಂದ ರದ್ದುಗೊಳಿಸಲಾಗಿದ್ದು, ರಾತ್ರಿ ಕರ್ಫ್ಯೂ ರಾತ್ರಿ 9 ರಿಂದ ಬೆಳಗಿನ ಜಾವ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ದಿನಾಂಕ: 05-07-2021 ರಂದು ಬೆಳಿಗ್ಗೆ 5 ಗಂಟೆಯಿAದ ದಿನಾಂಕ: 19-07-2021 ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಗೆ ಬರುವಂತೆ ಈ ಕೆಳ ಕಾಣಿಸಿದ ಸಡಿಲಿಕೆಗಳು/ನಿರ್ಬಂಧಗಳು ಜಾರಿಯಲ್ಲಿರುತ್ತವೆ.
ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊAದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
ಅಲ್ಲದೇ ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದ್ದು, ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
ಅನ್‌ಲಾಕ್ 02ರಲ್ಲಿ ಅಂತ್ಯ ಸಂಸ್ಕಾರಕ್ಕೆ ನೀಡಲಾಗಿದ್ದ ಐದು ಜನ ಭಾಗವಹಿಸುವ ಆದೇಶವನ್ನು ಪರಿಷ್ಕರಿಸಿ 20 ಜನರು ಭಾಗವಹಿಸಲು ಅನ್‌ಲಾಕ್ 03ರ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ. ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್‌ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ. ಜಿಲ್ಲೆಯಲ್ಲಿರುವ ಪರಿಸ್ಥಿತಿಗನುಗುಣವಾಗಿ ಆಯಾಯ ಜಿಲ್ಲೆಯ ಜಿಲ್ಲಾಡಳಿತಗಳು ಇನ್ನೂ ಹೆಚ್ಚಿನ ನಿರ್ಬಂಧಗಳು ಅವಶ್ಯವಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸೂಚಿಸಿದೆ.
ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here