
ಕಲಬುರಗಿ, ಜೂ.7: ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಎಎಸ್‌ಐ ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಜ್ಯೋತಿ ಹಾಗೂ ಎಎಸ್‌ಐ ಶಿವಶರಣಪ್ಪ ಅವರನ್ನು ಬಂಧಿಸಲಾಗಿದೆ.
ರೋಹಿಣಿನಗರ ನಿವಾಸಿಯೊಬ್ಬರು ನೀಡಿದ ದೂರಿನ ಅನ್ವಯ, ಪೊಲೀಸ್ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಆರೋಪಿಗಳು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆರಂಭದಲ್ಲಿ ರೂ.1,500 ನೀಡಿದರೆ ಸಾಲದು, ಸಾರ್ವಜನಿಕ ಅಭಿಯೋಜಕರಿಗೆ (ಪಿ.ಪಿ.) ಹಣ ಕೊಡಬೇಕಾಗುತ್ತದೆ ಎಂದು ಹೇಳಿ ರೂ. 1,000 ಲಂಚವಾಗಿ ಪಡೆದಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಬಳಿಕ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಹೇಳಿ ಎಎಸ್‌ಐ ಶಿವಶರಣಪ್ಪ ಹಾಗೂ ಪಿಸಿ ಜ್ಯೋತಿ ತಲಾ ರೂ.5,000ರಂತೆ ಒಟ್ಟು ರೂ.10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

ದೂರುದಾರರ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಮುರುಗುಂಡಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ.
ಲಂಚ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯ ಬಂಧನ ನಗರದ ಪೊಲೀಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.



